﻿ಕೀರ್ತನೆಗಳು.
1.
(ಕೀರ್ತನೆಗಳು 1-41) ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು. 
ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು. 
ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು. 
ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು. 
ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ. 
ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು. 
